ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ.
ಪುರಾಣ
ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು 'ಸರ್ಪಯಜ್ಞ'ವನ್ನು ಆರಂಭಿಸುತ್ತಾನೆ. ಆ ಸಂದರ್ಭದಲ್ಲಿ ಸರ್ಪಗಳ ದೂರದ ಬಂಧುವಾದ ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಪ್ರಾಣಿಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿತ್ತು.
ಮಹಾತ್ಮೆ
ತ್ರೇತಾಯುಗದಲ್ಲಿ ಶ್ರೀವಿಷ್ಣು ರಾಮನ ಅವತಾರವನ್ನು ಎತ್ತಿದಾಗ, ಶೇಷನು ಲಕ್ಷ್ಮಣನ ಅವತಾರವನ್ನು ಎತ್ತಿದ್ದನು. ದ್ವಾಪರ ಮತ್ತು ಕಲಿಯುಗದ ಸಂಧಿಕಾಲದಲ್ಲಿ ಕೃಷ್ಣನ ಅವತಾರವಾದಾಗ ಶೇಷನು ಬಲರಾಮನಾಗಿದ್ದನು.
ಒಟ್ಟಾರೆ ನಾಗರಪಂಚಮಿ ನಾಡಿನಲ್ಲಿ ದೊಡ್ಡ ಹಬ್ಬವಾಗಿದೆ. ಹಬ್ಬದ ಹೆಸರಲ್ಲಿ ನಿಜವಾದ ಹಾವುಗಳಿಗೆ ಹಾಲು ಎರೆಯಲು ಹೋಗಿ ಅಪಾಯ ಎಳೆದುಕೊಳ್ಳದಿರುವುದು ಒಳಿತು.